December 23, 2024

AKSHARA KRAANTI

AKSHARA KRAANTI




ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,51,700 ಮತದಾರರು : ಡಿಸಿ ನಲಿನ್ ಅತುಲ್

ಮೇ 7 ರಂದು ಮತದಾನ ಹಾಗೂ ಜೂನ್ 4 ರಂದು ಮತ ಎಣಿಕೆ

ಲೋಕಸಭಾ ಚುಣಾವಣೆ-2024 : ಜಿಲ್ಲಾ ಕೊಪ್ಪಳ ಚುನಾವಣಾಧಿಕಾರಿಗಳಿಂದ ಸುದ್ದಿಗೋಷ್ಠಿ

ಕೊಪ್ಪಳ,: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು18,51,700 ಮತದಾರರು ಮತದಾನ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ತಿಳಿಸಿದರು.

ಭಾನುವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಈಗಾಗಲೇ ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟ ಮಾಡಿದ್ದು, ಮಾ.16 ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಕರ್ನಾಟಕದಲ್ಲಿ ಒಟ್ಟು 2 ಹಂತದಲ್ಲಿ ಚುನಾವಣೆಯನ್ನು ಜರುಗಿಸಲು ಆಯೋಗವು ನಿರ್ಧರಿಸಿದ್ದು, 08-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ 2ನೇ ಹಂತದಲ್ಲಿ ಚುನಾವಣೆ ನಡೆಸಲಾಗುತ್ತಿದೆ. ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12ರಂದು ಅಧಿಸೂಚನೆ ಪ್ರಕಟವಾಗಲಿದೆ. ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದ್ದು, ಏ.20ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಏ.22 ಕೊನೆಯ ದಿನವಾಗಿದೆ. ಮೇ 7ರಂದು ಮತದಾನ ಹಾಗೂ ಜೂನ್ 4ರಂದು ಮತ ಎಣಿಕೆ ನಡೆಯಲಿದೆ ಎಂದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರನ್ನು ಸಹಾಯಕ ಚುನಾವಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಅದೇ ರೀತಿ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರವಾರು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, 60-ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, 61-ಕನಕಗಿರಿ ವಿಧಾನಸಭಾ ಕ್ಷೇತ್ರಕ್ಕೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಮಲ್ಲಪ್ಪ ತೊದಲಬಾಗಿ, 62-ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಕೊಪ್ಪಳ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಕುಮಾರ ಮಾಲಗಿತ್ತಿ, 63-ಯಲಬುರ್ಗಾ ವಿಧಾನಸಭಾ ಕ್ಷೇತ್ರಕ್ಕೆ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ, 64-ಕೊಪ್ಪಳ ವಿಧಾನಸಭಾ ಕ್ಷೇತ್ರಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರಾದ ಅನ್ನಪೂರ್ಣ ಮುದುಕಮ್ಮನವರ, 58-ಸಿಂಧನೂರು ವಿಧಾನಸಭಾ ಕ್ಷೇತ್ರಕ್ಕೆ ರಾಯಚೂರು ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಹೇಶ ಪೋತೆದಾರ, 59-ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ರಾಯಚೂರು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಜಗದೀಶ ಹಾಗೂ 92-ಸಿರಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ ಬಳ್ಳಾರಿಯ ಜಂಟಿ ಕೃಷಿನಿರ್ದೇಶಕರಾದ ತಿರುಮಲೇಶ ಎಂ. ಇವರು ಸಹಾಯಕ ಚುನಾವಣಾಧಿಕಾರಿಗಳಾಗಿದ್ದಾರೆ ಎಂದರು.

ಮಾದರಿ ನೀತಿ ಸಂಹಿತೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 47 ಫ್ಲೆಯಿಂಗ್ ಸ್ಕಾಡ್, ಒಟ್ಟು 32 ಚೆಕ್‌ಪೋಸ್ಟ್, ಒಟ್ಟು 27 ವಿಡಿಯೋ ಸರ್ವೆಲೆನ್ಸ್ ತಂಡ ಹಾಗೂ ಒಟ್ಟು 168 ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಮಾ.16 ರಿಂದ ಜೂನ್ 06 ರವರೆಗೆ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದ್ದು, ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳನ್ನು ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಇವರುಗಳನ್ನು ವಿಧಾನಸಭಾ ಮಟ್ಟದಲ್ಲಿ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ ಎಂದರು. ಮತದಾರರ ವಿವರ: 8-ಕೊಪ್ಪಳ ಲೋಕಸಭಾ ಕ್ಷೇತ್ರವು ಕೊಪ್ಪಳ ಜಿಲ್ಲೆಯ 60-ಕುಷ್ಟಗಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಹಾಗೂ 64-ಕೊಪ್ಪಳ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 58-ಸಿಂಧನೂರು, 59-ಮಸ್ಕಿ ಹಾಗೂ 92-ಸಿರಗುಪ್ಪಿ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಮಾರ್ಚ್ 16 ರಂತೆ ಒಟ್ಟು 1317 ಮತಗಟ್ಟೆಗಳು, 5,79,404 ಪುರುಷ ಮತಾದರರು, 5,89,690 ಮಹಿಳಾ ಮತದಾರರು ಮತ್ತು 57 ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 11,69,151 ಮತದಾರರಿದ್ದಾರೆ. ಸಿಂಧನೂರು, ಮಸ್ಕಿ ಹಾಗೂ ಸಿರಗುಪ್ಪಿ ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 2045 ಮತಗಟ್ಟೆಗಳಿದ್ದು, ಮಾರ್ಚ್ 16 ರ ಮತದಾರರ ಪಟ್ಟಿಯಂತೆ 9,12,818 ಪುರುಷ ಮತದಾರರು, 9,38,750 ಮಹಿಳಾ ಮತದಾರರು ಹಾಗೂ 132 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿದಂತೆ ಒಟ್ಟು 18,51,700 ಮತದಾರರು 8-ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮತದಾನ ಮಾಡಲಿದ್ದಾರೆ. ಒಟ್ಟು 18,51,700 ಮತದಾರರಲ್ಲಿ 46162 ಯುವ ಮತದಾರರು, 25,619 ವಿಕಲಚೇತನ ಮತದಾರರು, 12,900 ಮತದಾರರು 85 ವರ್ಷ ಮೇಲ್ಪಟ್ಟವರು ಹಾಗೂ 609 ಸೇವಾ ಮತದಾರರಿದ್ದಾರೆ ಎಂದರು. ಚುನಾವಣೆಗಳಲ್ಲಿ ಎದುರಾಗಬಹುದಾದ ಸವಾಲುಗಳಾದ ಹಣ, ಸುಳ್ಳು ಮಾಹಿತಿ, ನೀತಿ ಸಂಹಿತೆ ಉಲ್ಲಂಘನೆ ಮುಂತಾದವುಗಳನ್ನು ಎದುರಿಸು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಈ ಸಂಬಂಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುವುದು. ಶೇ.50 ರಷ್ಟು ಮತಗಟ್ಟೆಗಳಲ್ಲಿ ಸಿಸಿಟಿವಿ ಗಳನ್ನು ಅಳವಡಿಸಿ ವೆಬ್‌ಕಾಸ್ಟಿಂಗ್ ಕೈಗೊಳ್ಳಲಾಗುವುದು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಆಯೊಗದಿಂದ C-vigil App ಅನ್ನು ಪರಿಚಯಿಸಿದ್ದು, ಯಾವುದೇ ಸಾರ್ವಜನಿಕರು ಅನಾಮಧೇಯವಾಗಿ ಅಥವಾ ತಮ್ಮ ವಿವರಗಳನ್ನು ಸಲ್ಲಿಸುವ ಮೂಲಕ ಯಾವುದೇ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ದೂರು ಸಲ್ಲಿಸಬಹುದು. ದೂರು ಸಲ್ಲಿಸಿದ ಒಟ್ಟು 100 ನಿಮಿಷಗಳಲ್ಲಿ ಪ್ರಕರಣವನ್ನು ವಿಲೇಗೊಳಿಸಲಾಗುವುದು. ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಎಂಸಿಸಿ ತಂಡಗಳು ಜಪ್ತಿ ಮಾಡುವ ಹಣ, ಮದ್ಯ ಮತ್ತು ಇತರೆ ಸಾಮಗ್ರಿಗಳ ವಿವರಗಳನ್ನು ದಾಖಲಿಸಲು ESMSD ಆಪ್‌ನ್ನು ಪರಿಚಯಿಸಿರುತ್ತದೆ. ಎಲ್ಲಾ ಎಂಸಿಸಿ ತಂಡಗಳು, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ವಾಣಿಜ್ಯತೆರಿಗೆ ಇಲಾಖೆ ಅಧಿಕಾರಿಗಳು ಯಾವುದೇ ಹಣ, ಮದ್ಯ ಮತ್ತು ಇತರೆ ಸಾಮಗ್ರಿಗಳನ್ನು ಜಪ್ತಿ ಮಾಡಬೇಕಾದಲ್ಲಿ ESMSD ಆಪ್ ಮೂಲಕವೇ ಮಾಡಲಾಗುವುದು ಎಂದು ಚುನಾವಣಾ ಅಕ್ರಮ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ರಾಜಕೀಯ ಪಕ್ಷಗಳು, ಸ್ಪರ್ಧಿಸುವ ಅಭ್ಯರ್ಥಿಗಳು ರಾಜಕೀಯ ಸಭೆ, ಸಮಾರಂಭಗಳು, ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಲು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಹಾಯಕ ಚುನಾವಣಾಧಿಕಾರಿಗಳಿಂದ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪ್ರಚಾರ ಕಾರ್ಯಕ್ರಮಗಳಿಗೆ ಉಪಯೋಗಿಸುವ ವಾಹನಗಳಿಗೆ, ಪಕ್ಷದ ಕಛೇರಿ ತೆರೆಯಲು ಸೇರಿದಂತೆ ಎಲ್ಲಾ ಪರವಾನಗಿಗಳಿಗೆ 48 ಗಂಟೆ ಮುಂಚಿತವಾಗಿ SUVIDHA App ಮೂಲಕ ಅಥವಾ ಲಿಖಿತ ರೂಪದಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಮೇಲ್ಕಾಣಿಸಿದ ಅನುಮತಿಗಳಿಗಾಗಿ Single Window System (ಏಕ ಗವಾಕ್ಷಿ) ವ್ಯವಸ್ಥೆಯನ್ನು ಮಾಡಲಾಗಿರುತ್ತದೆ. ರಾಜಕೀಯ ಪಕ್ಷಗಳು ಮತ್ತು ಸ್ಪರ್ಧಿಸುವ ಅಭ್ಯರ್ಥಿಗಳು ಇದರಿಂದ ಉಪಯೋಗ ಪಡೆದುಕೊಳ್ಳಬಹುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ.68.41 ರಷ್ಟು ಮತದಾನವಾಗಿತ್ತು. 2024ರ ಚುನಾವಣೆಯಲ್ಲಿ ಗಣನೀಯವಾಗಿ ಮತದಾನ ಪ್ರಮಾಣ ಹೆಚ್ಚಿಸಲು ಹಲವಾರು ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮತದಾನದ ಅರಿವು ಮೂಡಿಸಲು ಗ್ರಾಮೀಣ ಹಾಗೂ ನಗರ, ಪಟ್ಟಣದ ಸುಮಾರು 39,832 ಮತದಾರರಿಗೆ ವಿದ್ಮುನ್ಮಾನ ಮತಯಂತ್ರದ ಮೂಲಕ ಅಣಕು ಮತದಾನದ ಪ್ರಾತ್ಯಾಕ್ಷಿತೆ ಕೈಗೊಳ್ಳಲಾಗಿದೆ. ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ವಿಚಾರ ಸಂಕಿರಣ, ಇತರ ಸ್ಪರ್ಧೆಗಳ ಮೂಲಕ ಮತದಾನ ಮಾಡಲು ಆಕರ್ಷಿಸಲಾಗಿದೆ. ಶೇ.70ಕ್ಕಿಂತ ಕಡಿಮೆ ಮತದಾನ ನಡೆದ ಮತಗಟ್ಟೆಗಳಲ್ಲಿ ಹೆಚ್ಚಿನ ಮತದಾನ ನಡೆಯುವಂತೆ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಲೋಕಸಭಾ ಚುನಾವಣೆಯನ್ನು ಸಂಪೂರ್ಣ ಶಾಂತಿ, ಪಾರದರ್ಶಕ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದೆ. ರೌಡಿಶೀಟರ್, ಕಮ್ಯುನಲ್ ಗೂಂಡಾ ಸೇರಿದಂತೆ ಪ್ರಕರಣಗಳಲ್ಲಿ ಗುರುತಿಸಲಾದ ರೌಡಿಶೀಟರ್‌ಗಳನ್ನು ಮುಂಜಾಗ್ರತಾ ಕ್ರಮವಾಗಿ ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ. ಚುನಾವಣಾ ಕರ್ತವ್ಯಕ್ಕೆ ವಿವಿಧ ಹಂತದಲ್ಲಿನ ಪೊಲೀಸ್ ಅಧಿಕಾರಿಗಳು ಸೇರಿ ಒಟ್ಟು 2200 ಸಿಬ್ಬಂದಿಗಳ ಅವಶ್ಯಕತೆಯಿದ್ದು, ಸದ್ಯ ಜಿಲ್ಲೆಯಲ್ಲಿ 715 ಜನ ಸಿಬ್ಬಂದಿಗಳಿದ್ದಾರೆ. ಉಳಿದ ಸಿಬ್ಬಂದಿಗಳನ್ನು ಹೊರಗಡೆಯಿಂದ ಕರೆಸಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳ ನಿಯಂತ್ರಣ ಹಾಗೂ ಮೇಲ್ವಿಚಾರಣೆಗೆ ತಂಡ ರಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗೆ ಅವಕಾಶ ಇಲ್ಲದಂತೆ ಸಾರ್ವಜನಿಕರು ಹಾಗೂ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಭದ್ರತೆಯನ್ನು ಕೈಗೊಳ್ಳಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಚುನಾವಣಾ ತಹಶೀಲ್ದಾರರಾದ ಡಿ.ಮಂಜುನಾಥ, ಜಿಲ್ಲಾಧಿಕಾರಿ ಕಚೇರಿ ಚುನಾವಣಾ ವಿಭಾಗದ ನಾಗರಾಜ, ಪ್ರಸನ್ನ ಸೇರಿದಂತೆ ಇತರರು ಇದ್ದರು.

ಸುದ್ದಿ ಮತ್ತು ಜಾಹಿರಾತಿಗಾಗಿ ಸಂಪರ್ಕಿಸಿ : 81520 17754
error: Content is protected !!